ಕಾಪು: ಕಾಂಗ್ರೆಸ್ ಮುಖಂಡ, ಮಾಜಿ ಗ್ರಾ.ಪಂ. ಅಧ್ಯಕ್ಷ ಡೇವಿಡ್ ಡಿಸೋಜಾ ಬರ್ಬರ ಹತ್ಯೆ

ಕಾಪು: ಮಾಜಿ ಗ್ರಾ.ಪಂ. ಅಧ್ಯಕ್ಷ, ಉದ್ಯಮಿ ಹಾಗೂ ಕಾಂಗ್ರೆಸ್ ಮುಖಂಡ ಡೇವಿಡ್ ಡಿಸೋಜಾ (ಪ್ರಿನ್ಸ್) ಅವರ ಮೇಲೆ ದುಷ್ಕರ್ಮಿಗಳು ಗುಂಡಿನ ದಾಳಿ ನಡೆಸಿ ಭೀಕರವಾಗಿ ಹತ್ಯೆಗೈದಿರುವ ಘಟನೆ ಆ. 7 ರಂದು ಶುಕ್ರವಾರ ಮಧ್ಯಾಹ್ನ ಪಡುಬಿದ್ರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
ಮಾಹಿತಿಯ ಪ್ರಕಾರ, ವಾಹನದಲ್ಲಿ ಬಂದಿದ್ದ ಇಬ್ಬರು ದುಷ್ಕರ್ಮಿಗಳು ಡೇವಿಡ್ ಡಿಸೋಜ ಅವರ ಮೇಲೆ ಏಕಾಏಕಿ ಗುಂಡಿನ ದಾಳಿ ನಡೆಸಿ ಸ್ಥಳದಿಂದ ಪರಾರಿಯಾಗಿದ್ದಾರೆ. ಗಂಭೀರವಾಗಿ ಗಾಯಗೊಂಡಿದ್ದ ಡೇವಿಡ್ ಅವರನ್ನು ತಕ್ಷಣ ಆಸ್ಪತ್ರೆಗೆ ಕರೆದೊಯ್ಯಲಾಗಿತ್ತಾದರೂ, ಮಾರ್ಗಮಧ್ಯೆಯೇ ಅವರು ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ.
ಸ್ಥಳೀಯವಾಗಿ ಪ್ರಭಾವಿ ಹಾಗೂ ಜನಪ್ರಿಯ ನಾಯಕರಾಗಿದ್ದ ಡೇವಿಡ್ ಡಿಸೋಜಾ ಅವರು ಸಮಾಜಮುಖಿ ಚಟುವಟಿಕೆಗಳ ಮೂಲಕ ಗುರುತಿಸಿಕೊಂಡಿದ್ದು, ಗ್ರಾಮ ಪಂಚಾಯಿತಿ ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದರು. ಅವರ ಮೇಲಿನ ದಿಢೀರ್ ಗುಂಡಿನ ದಾಳಿಯಿಂದ ಕಾಪು ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿದೆ.
ದುಷ್ಕರ್ಮಿಗಳು ಗುಂಡಿನ ದಾಳಿ ನಡೆಸಿ ಪರಾರಿಯಾಗಿದ್ದು, ಹತ್ಯೆಯ ನಿಖರ ಕಾರಣ ಇನ್ನೂ ಬೆಳಕಿಗೆ ಬಂದಿಲ್ಲ. ಘಟನೆಯ ಹಿಂದೆ ವೈಯಕ್ತಿಕ ದ್ವೇಷ, ಹಣಕಾಸಿನ ವ್ಯವಹಾರ, ರಾಜಕೀಯ ವೈಷಮ್ಯ ಅಥವಾ ಇನ್ನಿತರ ಕಾರಣಗಳಿವೆಯೇ ಎಂಬ ಎಲ್ಲಾ ಆಯಾಮಗಳಲ್ಲಿ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
ಮಾಹಿತಿ ತಿಳಿಯುತ್ತಿದ್ದಂತೆಯೇ ಹಿರಿಯ ಪೊಲೀಸ್ ಅಧಿಕಾರಿಗಳು ಹಾಗೂ ವಿಧಿವಿಜ್ಞಾನ ಪ್ರಯೋಗಾಲಯ (FSL) ತಜ್ಞರ ತಂಡ ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿತು. ಸ್ಥಳದಲ್ಲಿದ್ದ ಸಾಕ್ಷ್ಯಾಧಾರಗಳನ್ನು ಸಂಗ್ರಹಿಸಿರುವ ಪೊಲೀಸರು, ಪ್ರಕರಣ ದಾಖಲಿಸಿಕೊಂಡು ಆರೋಪಿಗಳ ಪತ್ತೆಗಾಗಿ ವಿಶೇಷ ತನಿಖೆ ಆರಂಭಿಸಿದ್ದಾರೆ.
