ಮಹಾಲಕ್ಷ್ಮೀ ಸಹಕಾರಿ ಬ್ಯಾಂಕ್ ಹೋರಾಟಕ್ಕೆ ಮಹತ್ವದ ತಿರುವು: ಸಂತ್ರಸ್ತರಿಗೆ ನ್ಯಾಯದ ಭರವಸೆ – ಬಿ.ಕೆ. ಹರಿಪ್ರಸಾದ್ ಭೇಟಿಯಾದ ನಾಗೇಂದ್ರ ಪುತ್ರನ್ ಕೋಟ

ಉಡುಪಿ: ಮಹಾಲಕ್ಷ್ಮೀ ಸಹಕಾರಿ ಬ್ಯಾಂಕ್ ಹೋರಾಟ ಸಮಿತಿಯ ಪ್ರಮುಖ ಹೋರಾಟಗಾರ ನಾಗೇಂದ್ರ ಪುತ್ರನ್ ಕೋಟ ಅವರು ಕಾಂಗ್ರೆಸ್ ಹಿರಿಯ ಮುಖಂಡ ಬಿ.ಕೆ. ಹರಿಪ್ರಸಾದ್ ಅವರನ್ನು ಭೇಟಿ ಮಾಡಿ, ಮಹಾಲಕ್ಷ್ಮೀ ಸಹಕಾರಿ ಬ್ಯಾಂಕ್ ಪ್ರಕರಣದಲ್ಲಿ ಅನ್ಯಾಯಕ್ಕೆ ಒಳಗಾದವರಿಗೆ ಶೀಘ್ರ ನ್ಯಾಯ ಒದಗಿಸುವಂತೆ ಮನವಿ ಸಲ್ಲಿಸಿದರು.
ಬಳಿಕ ಪತ್ರಿಕಾ ಹೇಳಿಕೆ ನೀಡಿದ ನಾಗೇಂದ್ರ ಪುತ್ರನ್ ಕೋಟ ಕಳೆದ ಮೂರು ವರ್ಷಗಳಿಂದ ಮಹಾಲಕ್ಷ್ಮೀ ಸಹಕಾರಿ ಬ್ಯಾಂಕ್ ಸಂತ್ರಸ್ತರ ಪರವಾಗಿ ನಿರಂತರ ಹೋರಾಟ ನಡೆಸುತ್ತಿದ್ದೇವೆ. ಇದೀಗ ಸಂತ್ರಸ್ತರಿಗೆ ನ್ಯಾಯ ದೊರೆಯುವ ಸಮಯ ಸಮೀಪಿಸಿದೆ ಎಂಬ ವಿಶ್ವಾಸ ವ್ಯಕ್ತಪಡಿಸಿದರು.
ಹೋರಾಟದ ಅವಧಿಯಲ್ಲಿ ವಿವಿಧ ರೀತಿಯ ಪಿತೂರಿಗಳ ಮೂಲಕ ಹೋರಾಟದ ದಿಕ್ಕು ತಪ್ಪಿಸಲು ಹಾಗೂ ಹೋರಾಟಗಾರರನ್ನು ಹಿಮ್ಮೆಟ್ಟಿಸಲು ಹಲವಾರು ಪ್ರಯತ್ನಗಳು ನಡೆದಿವೆ. ಆದರೆ ಸತ್ಯಾಂಶ ಹೊರಬರುವ ದಿನ ದೂರವಿಲ್ಲ. ಎಲ್ಲ ಪ್ರಶ್ನೆಗಳಿಗೂ ಸೂಕ್ತ ಉತ್ತರ ಸಿಗಲಿದ್ದು ನ್ಯಾಯ ಅಂತಿಮವಾಗಿ ಗೆಲುವು ಸಾಧಿಸಲಿದೆ ಎಂದು ಹೇಳಿದರು.
ಸಂತ್ರಸ್ತರಿಗೆ ಒಂದು ವರ್ಷದ ಹಿಂದೆಯೇ ನ್ಯಾಯ ದೊರೆಯಬೇಕಾಗಿತ್ತು. ಆದರೆ ಉಡುಪಿ ಜಿಲ್ಲಾ ಸಹಕಾರ ಇಲಾಖೆಯ ಉಪನಿಬಂಧಕ (ಡಿಆರ್) ಅವರ ಕಾರ್ಯವೈಖರಿಯಿಂದ ಜಿಲ್ಲೆಯ ಜನರಿಗೆ ತೀವ್ರ ಅನ್ಯಾಯವಾಗಿದೆ ಎಂದು ಆರೋಪಿಸಿದರು.
ಸರ್ಕಾರಿ ಹುದ್ದೆಯಲ್ಲಿದ್ದು ಬಡ ಹಾಗೂ ಸಂತ್ರಸ್ತರಿಗೆ ನ್ಯಾಯ ಒದಗಿಸಬೇಕಾದ ಅಧಿಕಾರಿಗಳು ಪ್ರಭಾವಿ ರಾಜಕಾರಣಿಗಳು ಮತ್ತು ಶ್ರೀಮಂತರ ಪ್ರಭಾವಕ್ಕೆ ಒಳಗಾಗಿದ್ದಾರೆ ಎಂದು ದೂರಿದ ಅವರು, 64ನೇ ವಿಧಿಯಡಿ ನಡೆದ ತನಿಖೆ ನ್ಯಾಯಸಮ್ಮತ ಹಾಗೂ ಪಾರದರ್ಶಕವಾಗಿ ನಡೆದಿದ್ದರೆ ಇಂದು ಸಂತ್ರಸ್ತರು ನ್ಯಾಯಕ್ಕಾಗಿ ನ್ಯಾಯಾಲಯ ಮತ್ತು ಸರ್ಕಾರಿ ಕಚೇರಿಗಳ ಅಲೆದಾಟ ನಡೆಸುವ ಪರಿಸ್ಥಿತಿ ನಿರ್ಮಾಣವಾಗುತ್ತಿರಲಿಲ್ಲ ಎಂದು ಹೇಳಿದರು.
ಉಡುಪಿ ಜಿಲ್ಲಾ ಸಹಕಾರ ಇಲಾಖೆಯ ಉಪನಿಬಂಧಕರ (ಡಿಆರ್) ಪಾತ್ರದ ಕುರಿತು ಸಮಗ್ರ ಹಾಗೂ ನಿಷ್ಪಕ್ಷಪಾತ ತನಿಖೆ ನಡೆಸಿ, ತಪ್ಪಿತಸ್ಥರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಬಿ.ಕೆ. ಹರಿಪ್ರಸಾದ್ ಅವರ ಮೂಲಕ ಸರ್ಕಾರವನ್ನು ಒತ್ತಾಯಿಸಿರುವುದಾಗಿ ನಾಗೇಂದ್ರ ಪುತ್ರನ್ ಕೋಟ ತಿಳಿಸಿದರು.
