ಮಹಾಲಕ್ಷ್ಮೀ ಬ್ಯಾಂಕ್ ಹಗರಣಕ್ಕೆ ಎಸ್‌ಐಟಿ ತನಿಖೆ ಆಗ್ರಹ: ನಾಗೇಂದ್ರ ಪುತ್ರನ್ ಮನವಿ, ವಿಧಾನ ಪರಿಷತ್‌ನಲ್ಲಿ ಬಿ.ಕೆ. ಹರಿಪ್ರಸಾದ್ ಧ್ವನಿ

ಮಹಾಲಕ್ಷ್ಮೀ ಬ್ಯಾಂಕ್ ಹಗರಣಕ್ಕೆ ಎಸ್‌ಐಟಿ ತನಿಖೆ ಆಗ್ರಹ: ನಾಗೇಂದ್ರ ಪುತ್ರನ್ ಮನವಿ, ವಿಧಾನ ಪರಿಷತ್‌ನಲ್ಲಿ ಬಿ.ಕೆ. ಹರಿಪ್ರಸಾದ್ ಧ್ವನಿ

ಬೆಂಗಳೂರು: ಉಡುಪಿ ಶಾಸಕ ಯಶಪಾಲ್ ಸುವರ್ಣ ಅಧ್ಯಕ್ಷತೆಯ ಮಹಾಲಕ್ಷ್ಮೀ ಕೋ-ಆಪರೇಟಿವ್ ಬ್ಯಾಂಕ್‌ನಲ್ಲಿ ನಡೆದಿದೆ ಎನ್ನಲಾದ ಬಹುಕೋಟಿ ವಂಚನೆ ಹಾಗೂ ಮಲ್ಪೆ ಶಾಖೆಯ ವ್ಯವಸ್ಥಾಪಕರ ಅಸಹಜ ಸಾವಿನ ಪ್ರಕರಣವನ್ನು ವಿಶೇಷ ತನಿಖಾ ತಂಡದಿಂದ (SIT) ಸಮಗ್ರವಾಗಿ ತನಿಖೆ ನಡೆಸಬೇಕು ಎಂದು ಕೆಪಿಸಿಸಿ ಅಧ್ಯಕ್ಷ ಬಿ.ಕೆ. ಹರಿಪ್ರಸಾದ್ ವಿಧಾನ ಪರಿಷತ್‌ನಲ್ಲಿ ಸರ್ಕಾರವನ್ನು ಒತ್ತಾಯಿಸಿದ್ದಾರೆ.

ಮಹಾಲಕ್ಷ್ಮೀ ಸಹಕಾರಿ ಬ್ಯಾಂಕ್‌ನಲ್ಲಿ 100ಕ್ಕೂ ಅಧಿಕ ಗ್ರಾಹಕರಿಗೆ ₹150 ಕೋಟಿಗೂ ಹೆಚ್ಚಿನ ಮೊತ್ತದ ವಂಚನೆಯಾಗಿದೆ ಎಂದು ಆರೋಪಿಸಿರುವ ಹರಿಪ್ರಸಾದ್ ಪ್ರಕರಣದಲ್ಲಿ ಬ್ಯಾಂಕ್‌ನ ಮಲ್ಪೆ ಶಾಖೆಯ ವ್ಯವಸ್ಥಾಪಕ ಸುಬ್ಬಣ್ಣ ಅವರ ಅಸಹಜ ಸಾವಿನ ಬಗ್ಗೆಯೂ ಸಮಗ್ರ ತನಿಖೆ ಅಗತ್ಯವಿದೆ ಎಂದು ಹೇಳಿದ್ದಾರೆ.

ಸುಬ್ಬಣ್ಣ ಅವರ ಸಾವನ್ನು ಮೇಲ್ನೋಟಕ್ಕೆ ಆತ್ಮಹತ್ಯೆ ಎಂದು ಬಿಂಬಿಸಲಾಗಿದ್ದರೂ ಇದು ಆತ್ಮಹತ್ಯೆಯಲ್ಲ ಕೊಲೆ ಎಂಬ ಅನುಮಾನವಿದೆ ಎಂದು ಹರಿಪ್ರಸಾದ್ ಗಂಭೀರ ಆರೋಪ ಮಾಡಿದ್ದಾರೆ.

ಈ ಹಿನ್ನೆಲೆಯಲ್ಲಿ ವಂಚನೆ ಪ್ರಕರಣದ ಜೊತೆಗೆ ವ್ಯವಸ್ಥಾಪಕರ ಸಾವಿನ ಹಿಂದಿರುವ ನೈಜ ಕಾರಣವನ್ನೂ ಎಸ್‌ಐಟಿ ತನಿಖೆಗೆ ಒಳಪಡಿಸಬೇಕು ಎಂದು ಆಗ್ರಹಿಸಿದ್ದಾರೆ.

ವಂಚನೆಗೆ ಒಳಗಾದ ಗ್ರಾಹಕರು ಮಹಾಲಕ್ಷ್ಮೀ ಬ್ಯಾಂಕ್ ಸಂತ್ರಸ್ತ ಗ್ರಾಹಕರ ಹಿತರಕ್ಷಣಾ ವೇದಿಕೆ ರಚಿಸಿಕೊಂಡು ನ್ಯಾಯಕ್ಕಾಗಿ ಹೋರಾಟ ನಡೆಸುತ್ತಿದ್ದಾರೆ. ಆದರೆ ಬ್ಯಾಂಕ್ ಅಧ್ಯಕ್ಷರಾಗಿರುವ ಶಾಸಕ ಯಶಪಾಲ್ ಸುವರ್ಣ ಅವರು ತಮ್ಮ ಪ್ರಭಾವ ಬಳಸಿ ಪ್ರಕರಣದ ತನಿಖೆಗೆ ಅಡ್ಡಿಪಡಿಸುತ್ತಿದ್ದಾರೆ ಎಂಬ ಆರೋಪವನ್ನೂ ಹರಿಪ್ರಸಾದ್ ಮಾಡಿದ್ದಾರೆ.

ಮಹಾಲಕ್ಷ್ಮೀ ಸಹಕಾರಿ ಬ್ಯಾಂಕ್ ಹೋರಾಟ ಸಮಿತಿಯ ಪ್ರಮುಖ ಹೋರಾಟಗಾರ ನಾಗೇಂದ್ರ ಪುತ್ರನ್ ಕೋಟ ಅವರು ಕೆಲವು ದಿನಗಳ ಹಿಂದೆ ಬಿ.ಕೆ. ಹರಿಪ್ರಸಾದ್ ಅವರನ್ನು ಭೇಟಿ ಮಾಡಿ ಬ್ಯಾಂಕ್ ಪ್ರಕರಣದಲ್ಲಿ ಅನ್ಯಾಯಕ್ಕೊಳಗಾದ ಗ್ರಾಹಕರಿಗೆ ಶೀಘ್ರ ನ್ಯಾಯ ಒದಗಿಸುವಂತೆ ಮನವಿ ಸಲ್ಲಿಸಿದ್ದರು. ಈ ಮನವಿಯ ಹಿನ್ನೆಲೆಯಲ್ಲಿ ಹರಿಪ್ರಸಾದ್ ಅವರು ಇಂದು ವಿಧಾನ ಪರಿಷತ್‌ನಲ್ಲಿ ಪ್ರಕರಣವನ್ನು ಪ್ರಸ್ತಾಪಿಸಿ ಸರ್ಕಾರದ ಗಮನ ಸೆಳೆದಿದ್ದಾರೆ.

ಬಹುಕೋಟಿ ವಂಚನೆ ಗ್ರಾಹಕರ ಹಣದ ದುರ್ಬಳಕೆ ಹಾಗೂ ಬ್ಯಾಂಕ್ ವ್ಯವಸ್ಥಾಪಕರ ಅಸಹಜ ಸಾವಿನ ಆರೋಪಗಳು ಕೇಳಿಬಂದಿರುವ ಹಿನ್ನೆಲೆಯಲ್ಲಿ ಪ್ರಕರಣದ ಸತ್ಯಾಸತ್ಯತೆ ಹೊರಬರಲು ನಿಷ್ಪಕ್ಷಪಾತ ತನಿಖೆ ಅಗತ್ಯ ಎಂದು ಒತ್ತಾಯಿಸಿರುವ ಅವರು ಮಹಾಲಕ್ಷ್ಮೀ ಬ್ಯಾಂಕ್ ಪ್ರಕರಣಕ್ಕೆ ಸಂಬಂಧಿಸಿದಂತೆ ತಕ್ಷಣ ಎಸ್‌ಐಟಿ ರಚಿಸಿ ತನಿಖೆ ನಡೆಸಬೇಕು ಎಂದು ಸರ್ಕಾರಕ್ಕೆ ಆಗ್ರಹಿಸಿದ್ದಾರೆ.

Leave a Reply

Your email address will not be published. Required fields are marked *